ಮಂಗಳೂರು: ತೊಕ್ಕೊಟ್ಟು ಓವರ್‌ಬ್ರಿಡ್ಜ್ (ಮೇಲುಸೇತುವೆ) ಬಳಿ ಸೋಮವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಸೋಮೇಶ್ವರ ಗ್ರಾಮದ ಪಿಲಾರು ಸರಕಾರಿ ಶಾಲಾ ಬಳಿಯ ನಿವಾಸಿ, ರಾಮಚಂದ್ರ ಬಿ. (59) ಎಂದು ಗುರುತಿಸಲಾಗಿದೆ.
ಸೋಮವಾರ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ರಾಮಚಂದ್ರ ಅವರು, ಸಂಜೆ ಓವರ್‌ಬ್ರಿಡ್ಜ್ ಬಳಿಯ ಬಸ್ ನಿಲ್ದಾಣದಲ್ಲಿ ಉಳ್ಳಾಲದ ಬಸ್ಸಿನಿಂದ ಇಳಿದಿದ್ದರು. ಈ ವೇಳೆ ಅವರು ರಾಷ್ಟ್ರೀಯ ಹೆದ್ದಾರಿ ದಾಟಲು ಯತ್ನಿಸುತ್ತಿದ್ದಾಗ ಮಂಗಳೂರಿನತ್ತ ಸಾಗುತ್ತಿದ್ದ ಲಾರಿಯೊಂದು ಅವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಲಾರಿ ಡಿಕ್ಕಿಯ ತೀವ್ರತೆಯಿಂದಾಗಿ ರಾಮಚಂದ್ರ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ಅವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣದ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.


0 Comments