ಪುತ್ತೂರು: ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಈಚೆಗೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ, ಅಕ್ಟೋಬರ್ 30 ರಂದು ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಧಾರ್ಮಿಕ ದ್ವೇಷ ಪ್ರಚೋದಿಸುವ ಮತ್ತು ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಅವರ ಭಾಷಣವು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರಗೊಂಡಿದ್ದು, ಇದು ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆ ನೀಡಿ, ಮತದಾರರ ಸಂಖ್ಯೆಯನ್ನು ಉಲ್ಲೇಖಿಸಿ ಧಾರ್ಮಿಕ ವೈಮನಸ್ಸು ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಪುತ್ತೂರು ತಾಲ್ಲೂಕಿನ ಈಶ್ವರಿ ಪದ್ಮುಂಜ ಅವರು ಶನಿವಾರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನನ್ವಯ, ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ.


0 Comments