ರಾಜ್ಯದ ಜನತೆಗೆ ಆರೋಗ್ಯ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ಮುಂದೆ ಹಾವು ಕಡಿತದ ಪ್ರಕರಣಗಳಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ (AB-ArK) ಯೋಜನೆಯಡಿ ನಗದು ರಹಿತ ಚಿಕಿತ್ಸೆ ಲಭ್ಯವಾಗಲಿದೆ. ಈ ಕುರಿತು ಆರೋಗ್ಯ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಹಾವು ಕಡಿತದಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಸರ್ಕಾರಿ ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಸಿಗಲಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಮತ್ತು ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಈ ಯೋಜನೆ ಜಾರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತ್ಯೇಕ ದರಗಳನ್ನು ನಿಗದಿಪಡಿಸಿದೆ. ಸಾಮಾನ್ಯ ವಾರ್ಡ್‌ಗಳಲ್ಲಿ (General Ward) ಚಿಕಿತ್ಸೆ ಪಡೆಯುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ದಿನಕ್ಕೆ 1,350 ರೂ. ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಿನಕ್ಕೆ 2,300 ರೂ. ಎಂದು ದರ ನಿಗದಿ ಮಾಡಲಾಗಿದೆ. ಈ ವೆಚ್ಚವನ್ನು ಯೋಜನೆಯಡಿ ಭರಿಸಲಾಗುವುದು.
ಒಂದು ವೇಳೆ ರೋಗಿಯ ಸ್ಥಿತಿ ಗಂಭೀರವಾಗಿದ್ದು ಹೆಚ್.ಡಿ.ಯು (HDU) ವಾರ್ಡ್‌ನಲ್ಲಿ ಚಿಕಿತ್ಸೆ ಅಗತ್ಯವಿದ್ದಲ್ಲಿ ಅದಕ್ಕೂ ದರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯ ಹೆಚ್.ಡಿ.ಯು ವಾರ್ಡ್‌ಗೆ ದಿನಕ್ಕೆ 2,025 ರೂ. ಹಾಗೂ ಖಾಸಗಿ ಆಸ್ಪತ್ರೆಗೆ ದಿನಕ್ಕೆ 3,800 ರೂ. ನಿಗದಿಪಡಿಸಲಾಗಿದೆ. ಈ ಕ್ರಮದಿಂದ ತುರ್ತು ಸಂದರ್ಭದಲ್ಲಿ ಬಡ ರೋಗಿಗಳ ಮೇಲಾಗುವ ಆರ್ಥಿಕ ಹೊರೆಯನ್ನು ತಗ್ಗಿಸಲು ಸರ್ಕಾರ ಮುಂದಾಗಿದೆ.

0 Comments