ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಹಾಲಿ ಶಾಸಕ ಹೆಚ್.ವೈ. ಮೇಟಿ (79) ಅವರು ವಿಧಿವಶರಾಗಿದ್ದಾರೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಪ್ರಾತಿನಿಧಿಸುತ್ತಿದ್ದ ಇವರು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಾಜಕೀಯದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದ ಮೇಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೇಟಿ ಅವರ ಆರೋಗ್ಯ ವಿಚಾರಿಸಿದ್ದರು.
ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ಅಕ್ಟೋಬರ್ 9, 1946ರಂದು ಜನಿಸಿದ್ದ ಹೆಚ್.ವೈ. ಮೇಟಿ ಅವರು ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು. 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪಯಣ ಆರಂಭಿಸಿದರು. 1994ರಲ್ಲಿ ಜೆಡಿಎಸ್‌ನಿಂದ ಎರಡನೇ ಬಾರಿ ಗೆಲುವು ಸಾಧಿಸಿ, ಆಗಿನ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಸಚಿವ ಸ್ಥಾನದ ನಂತರ 1996ರಲ್ಲಿ ಹೆಚ್.ವೈ. ಮೇಟಿ ಅವರು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದರು. 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆಲುವು ಸಾಧಿಸಿ ರಾಜ್ಯ ರಾಜಕಾರಣಕ್ಕೆ ಮರಳಿದ್ದರು. ಸತತವಾಗಿ ಹಲವು ಹುದ್ದೆಗಳನ್ನು ನಿರ್ವಹಿಸಿ, ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದ ಮೇಟಿ ಅವರ ನಿಧನದಿಂದ ಜಿಲ್ಲೆಯ ಮತ್ತು ರಾಜ್ಯದ ರಾಜಕೀಯ ವಲಯದಲ್ಲಿ ದೊಡ್ಡ ಶೂನ್ಯ ಮೂಡಿದೆ. ಅವರ ಅಂತ್ಯಕ್ರಿಯೆಯ ವಿವರಗಳನ್ನು ಕುಟುಂಬ ಮೂಲಗಳು ಶೀಘ್ರದಲ್ಲಿ ಪ್ರಕಟಿಸಲಿವೆ.

0 Comments