ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದೊಳಗೆ ರಾಜ್ಯದಲ್ಲಿ 11,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ಸ್ಥಿತಿಗತಿಗಳ ಕುರಿತು ವಿವರ ನೀಡಿದರು. “ರಾಜ್ಯದಲ್ಲಿ ಒಟ್ಟು 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, 1,78,935 ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿವೆ, ಇನ್ನೂ 45,590 ಹುದ್ದೆಗಳು ಖಾಲಿ ಇವೆ” ಎಂದು ತಿಳಿಸಿದರು.
ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಂಡಿದ್ದು, ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು. ಮೊದಲ ಹಂತದಲ್ಲೇ ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಈ ಕ್ರಮದಿಂದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಸಮಸ್ಯೆಗೆ ಪರಿಹಾರ ಸಿಗಲಿದ್ದು, ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಲು ಸಹಕಾರಿಯಾಗಲಿದೆ ಎಂದು ಸರ್ಕಾರ ನಿರೀಕ್ಷಿಸಿದೆ.

0 Comments