ಕಳೆದ ನಾಲ್ಕು ವರ್ಷಗಳಿಂದ ನಡೆಯದೆ ಬಾಕಿ ಉಳಿದಿದ್ದ ಜಿಲ್ಲಾ ಪಂಚಾಯ್ತಿ (ಜಿ.ಪಂ.) ಮತ್ತು ತಾಲೂಕು ಪಂಚಾಯ್ತಿ (ತಾ.ಪಂ.) ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರವು ಕೊನೆಗೂ ಮಹತ್ವದ ನಿರ್ಧಾರ ಕೈಗೊಂಡಿದೆ. ಜಿ.ಪಂ., ತಾ.ಪಂ. ಚುನಾವಣೆ ವಿಳಂಬಕ್ಕೆ ಸಂಬಂಧಿಸಿದ ಪ್ರಕರಣವು ನ್ಯಾಯಾಲಯದಲ್ಲಿದ್ದು, ತ್ವರಿತಗತಿಯಲ್ಲಿ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವೂ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ಸಹಮತ ವ್ಯಕ್ತಪಡಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರವೂ ಇಲ್ಲಿಯವರೆಗೆ ಒಂದೂ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯದ ಕಾರಣ, ಅನಗತ್ಯ ವಿಳಂಬ ಮಾಡದೆ, ತಕ್ಷಣವೇ ವ್ಯಾಪ್ತಿ ಪುನರ್ ವಿಂಗಡಣೆ, ಅಂತಿಮ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಚುನಾವಣಾ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ರಾಜ್ಯದಲ್ಲಿನ ಒಟ್ಟು 6,500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಸಿದ್ಧತೆಗಳನ್ನು ಆರಂಭಿಸಲು ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿಗಳ ಜೊತೆಗೆ ವಿವಿಧ ಪುರಸಭೆ ಹಾಗೂ ನಗರಸಭೆಗಳಿಗೂ ಸೇರಿ 2026ರ ಏಪ್ರಿಲ್‌ನಲ್ಲಿ ಚುನಾವಣೆಗಳನ್ನು ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಪ್ರತಿನಿಧಿಗಳನ್ನು ಹೊಂದುವ ದಾರಿಗೆ ಸರ್ಕಾರ ಮುನ್ನುಡಿ ಬರೆದಿದೆ.
ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಕೊನೆಯ ಬಾರಿಗೆ 2016ರ ಏಪ್ರಿಲ್‌ನಲ್ಲಿ ಚುನಾವಣೆ ನಡೆದಿತ್ತು. ಆದರೆ, ಆಯ್ಕೆಯಾದ ಸದಸ್ಯರ ಅವಧಿಯು 2021ರ ಏಪ್ರಿಲ್ 27ರಂದು ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಚುನಾವಣೆ ನಡೆಸುವುದು ಸುಮಾರು ಐದು ವರ್ಷ ವಿಳಂಬವಾಗಿದೆ. ಈ ವಿಳಂಬಕ್ಕೆ ತೆರೆ ಎಳೆಯಲು ಮತ್ತು 2026ರ ಬೇಸಿಗೆ ಅವಧಿ ಮುಗಿಯುವ ಮೊದಲು ಚುನಾವಣೆಗಳನ್ನು ನಡೆಸಲು ಅನುಕೂಲವಾಗುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಎಲ್ಲಾ ಅಗತ್ಯ ಸಹಕಾರ ಮತ್ತು ನೆರವು ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

0 Comments