ಆಂಧ್ರಪ್ರದೇಶದ ಅಲ್ಲೂರು ಎಂಬಲ್ಲಿ ಇಂದು ಬೆಳಗಿನ ಜಾವ 5.30ರ ಸುಮಾರಿಗೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 9 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲೂರಿನ ತುಳಸಿಪಕಲು ಗ್ರಾಮದ ಬಳಿ, ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಪಕ್ಕಕ್ಕೆ ಉರುಳಿ ಕಡಿದಾದ ಇಳಿಜಾರಿನ ಕಂದಕಕ್ಕೆ ಬಿದ್ದಿದೆ ಎಂದು ವರದಿಯಾಗಿದೆ. ಈ ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಜಿಲ್ಲಾಧಿಕಾರಿಗಳ ಪ್ರಕಾರ, ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಗೊಂಡವರ ಪೈಕಿ ಏಳು ಮಂದಿಯನ್ನು ತಕ್ಷಣ ಸಿಎಚ್‌ಸಿ ಚಿಂತೂರಿಗೆ ಸ್ಥಳಾಂತರಿಸಲಾಗಿದೆ.
ಕಡಿದಾದ ತಿರುವಿನಲ್ಲಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಅವಶೇಷಗಳನ್ನು ತೆರವುಗೊಳಿಸುವ ಕಾರ್ಯವೂ ಮುಂದುವರೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಭದ್ರಾಚಲಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎಎಸ್‌ಆರ್ ಜಿಲ್ಲಾಧಿಕಾರಿ ದಿನೇಶ್ ಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಸಾವು-ನೋವು ಸಂಭವಿಸದಂತೆ ಮುಂಜಾಗ್ರತೆ ವಹಿಸಲಾಗಿದೆ.
ಈ ಘಟನೆಯ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಅಪಘಾತ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಅವರು ಆದೇಶಿಸಿದ್ದಾರೆ. ಗಾಯಾಳುಗಳಿಗೆ ಪರಿಹಾರ ನೀಡುವ ಬಗ್ಗೆಯೂ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸಬೇಕು ಎಂದು ಅವರು ಸೂಚಿಸಿದ್ದಾರೆ.

0 Comments