ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ಆಗಸ್ಟ್‌ 4ರಂದು ರಜೆ

 

ಮಂಗಳೂರು, ಆ.3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಆಗಸ್ಟ್‌ 4ರಂದು ಜಿಲ್ಲೆಯ ವಿವಿಧ ತಾಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.




ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳು ಹಾಗೂ 10ನೇ ತರಗತಿವರೆಗಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳು, ಎಲ್ಲಾ ಶಾಲೆಗಳು, ಪದವಿಪೂರ್ವ (ಪಿಯು) ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

ಆದರೆ, ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಹಾಗೂ ಇತರ ಸಾರ್ವಜನಿಕ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಶಾಲೆ-ಕಾಲೇಜುಗಳ ಶಿಕ್ಷಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಇದೇ ವೇಳೆ, ಮುಂದಿನ ದಿನಗಳಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ನದಿ, ಹೊಳೆ, ಕೆರೆ ಹಾಗೂ ಜಲಾಶಯಗಳ ಸಮೀಪಕ್ಕೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Post a Comment

0 Comments